Thursday, 20 September 2012

ಇಂಗ್ಲಿಷ್ ಶಾಲೆಗಳ ಬಗ್ಗೆ ಕನ್ನಡಿಗರು ಏನನ್ನುತ್ತಾರೆ?

ಮುರುಳಿ ಮೋಹನ್
ಸಪ್ತಗಿರಿ ಸ್ಟೋಡಿಯೂ
ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಆರನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆಗಳನ್ನು ತಾನೇ ಆರಂಭಿಸಲು ಮುಂದಾಗಿದೆ. ಈ ನಡೆಯು ಕನ್ನಡ ಮಾಧ್ಯಮ ಕಲಿಕೆಯ ಬಗ್ಗೆ ನಂಬಿಕೆಯಾಗಲೀ, ಈಗಿರುವ ಕನ್ನಡ ಮಾಧ್ಯಮದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಯೋಚನೆಯಾಗಲೀ ಸರ್ಕಾರಕ್ಕಿಲ್ಲವೆಂಬುವಂತಿದೆ. ಸರ್ಕಾರದ ಈ ನಡೆಯು ದೀರ್ಘಾವಧಿಯಲ್ಲಿ ನಾಡಿನ ಏಳಿಗೆಯನ್ನು ಮಣ್ಣುಪಾಲು ಮಾಡಬಲ್ಲುದಾಗಿದೆ.ರಾಜ್ಯ ಸರ್ಕಾರವು ಕಲಿಕೆಯ ವಿಷಯದಲ್ಲಿ ಮೊದಲಿನಿಂದಲೂ ಕನ್ನಡ ವಿರೋಧಿಯನ್ನು ಧೋರಣೆಯನ್ನು ತೋರಿಸುತ್ತಿರುವ ಅನುಮಾನವಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಯನ್ನು ಭಾರತೀಯ ವಿದ್ಯಾಭವನ ಎನ್ನುವ ಖಾಸಗಿ ಸಂಸ್ಥೆಗೆ ಕೇಂದ್ರೀಯ ಪಠ್ಯಕ್ರಮದ ಆಂಗ್ಲ ಮಾಧ್ಯಮ ಶಾಲೆಯನ್ನು ನಡೆಸಲು ಒಪ್ಪಿಸಿಬಿಟ್ಟಿತು. ಆ ಮೂಲಕ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ತನಗೆ ನಂಬಿಕೆ ಇಲ್ಲವೆಂಬುದನ್ನು ತೋರಿಸಿಕೊಂಡಿತ್ತು. ಹೀಗೆ ನಡೆದುಕೊಳ್ಳಲು "ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು" ಎನ್ನುವ ಕಾರಣವನ್ನು ನೀಡಿತ್ತು. ಇದಾದ ಕೆಲದಿನಗಳಲ್ಲೇ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂದು ಸುಮಾರು ಮೂರು ಸಾವಿರ ಕನ್ನಡ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಮುಂದಾಯಿತು. ಈ ಬಗ್ಗೆ ಜನರಿಂದ ವಿರೋಧ ಬಂದಾಗ "ಮುಚ್ಚುವಿಕೆ ಅಲ್ಲಾ... ಹತ್ತಿರದ ಶಾಲೆಯೊಂದಿಗೆ ವಿಲೀನ" ಎಂದಿತು.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಯಾಕೆ ಕಡಿಮೆ? ಎನ್ನುವುದಕ್ಕೆ "ಹಳ್ಳಿಗಳಿಂದ ನಗರಗಳಿಗೆ ಜನರು ವಲಸೆ ಹೋಗುತ್ತಿದ್ದಾರೆ" ಎಂದಿತು. "ಹಾಗಾದರೆ ಹಳ್ಳಿಗಾಡಿನ ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೇಗೆ ಹೆಚ್ಚುತ್ತಿದೆ?" ಎನ್ನುವ ಪ್ರಶ್ನೆಗೆ ಉತ್ತರವಿಲ್ಲ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಮಕ್ಕಳ ಸಂಖ್ಯೆ ಐದಕ್ಕಿಂತಾ ಕಡಿಮೆಯಿದೆ ಎನ್ನುವ ಕಾರಣ ನೀಡುತ್ತಾ "ಇದು ಕೇಂದ್ರ ಸರ್ಕಾರದ ಆದೇಶ, ನಮ್ಮ ತಪ್ಪೇನೂ ಇಲ್ಲಾ" ಎಂದು ತಿಪ್ಪೆ ಸಾರಿಸಲಾಯಿತು. ಇಷ್ಟೇ ಅಲ್ಲದೆ ಕೇಂದ್ರೀಯ ಪಠ್ಯಕ್ರಮದ ಶಾಲೆಗಳನ್ನು ಆರಂಭಿಸಲು ಇರುವ ಕಟ್ಟುಪಾಡುಗಳನ್ನೆಲ್ಲಾ ಗಾಳಿಗೆ ತೂರಿ ನಿರಾಕ್ಷೇಪಣಾ ಪತ್ರಗಳನ್ನು ನೀಡುವುದನ್ನು ಮುಂದುವರೆಸಲಾಯಿತು, ಇದು ಬೀದಿಗೊಂದು ಕೇಂದ್ರ ಪಠ್ಯಕ್ರಮದ ಶಾಲೆ ಆರಂಭವಾಗಲು ಕಾರಣವಾಯಿತು. ಇವಿಷ್ಟೂ ಒಂದು ಹಂತದ ಕಥೆಯಾದರೆ ಈಗಿನದ್ದು ಮತ್ತೊಂದು.ಈಗ ರಾಜ್ಯ ಸರ್ಕಾರದ ೩೪೧ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಶುರುಮಾಡಲು ಮುಂದಾಗಿದೆ. "ಇದಕ್ಕೆ ಜನರಿಂದ ಬೇಡಿಕೆಯಿದೆ, ಬಡಮಕ್ಕಳು ಖಾಸಗಿ ಶಾಲೆಗಳನ್ನು ಸೇರಲಾಗದ ಕಾರಣದಿಂದ ಆಂಗ್ಲ ಮಾಧ್ಯಮದಲ್ಲಿ ಕಲಿಯುವುದರಿಂದ ವಂಚಿತರಾಗಬಾರದು, ಇದು ರಾಜ್ಯ ಸರ್ಕಾರದ ಭಾಷಾ ನೀತಿಯನ್ನು ಉಲ್ಲಂಘಿಸುತ್ತಿಲ್ಲ" ಇತ್ಯಾದಿ ಕಾರಣಗಳನ್ನು ಕೊಡಲಾಗುತ್ತಿದೆ. ಕರ್ನಾಟಕದ ಭಾಷಾ ನೀತಿ ಕನ್ನಡ ಮಾಧ್ಯಮದಲ್ಲಿನ ಕಲಿಕೆಯನ್ನು ೫ನೇ ತರಗತಿಯವರೆಗೆ ಕಡ್ಡಾಯ ಮಾಡಿರುವುದನ್ನು "ಕನಿಷ್ಠ ೫ನೇ ತರಗತಿಯವರೆಗೆ" ಎಂದು ಪರಿಗಣಿಸದೇ "ಗರಿಷ್ಠ ೫ನೇ ತರಗತಿಯವರೆಗೆ" ಎಂದು ಸರ್ಕಾರ ಪರಿಗಣಿಸಿದಂತಿದೆ.ಇದೆಲ್ಲದರ ಅರ್ಥವು ನೇರವೂ ಸರಳವೂ ಆಗಿದೆ. ಕನ್ನಡನಾಡಿನ ಭವಿಷ್ಯ ರೂಪಿಸಲು ಅಗತ್ಯವಾಗಿರುವ ’ಕನ್ನಡಿಗರ ಕಲಿಕೆ’ಗೆ ‘ಕನ್ನಡ ನುಡಿ’ ಯೋಗ್ಯವಾಗಿದೆ ಎನ್ನುವ ನಂಬಿಕೆಯೇ ಸರ್ಕಾರಕ್ಕಿಲ್ಲ. ಈಗಿರುವ ಕಲಿಕೆ ಏರ್ಪಾಟಿನಲ್ಲಿರುವ ಕುಂದುಕೊರತೆಗಳನ್ನು ನೀಗಿಸಿಕೊಂಡು "ಅತ್ಯುತ್ತಮವಾಗಿ ನಿರ್ವಹಿಸಲಾಗುತ್ತಿರುವ, ಅತ್ಯುತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ"ಯನ್ನು ಕಟ್ಟಬೇಕೆಂಬ ಸಣ್ಣ ಹಂಬಲವೂ ಸರ್ಕಾರಕ್ಕಿರುವಂತೆ ತೋರುತ್ತಿಲ್ಲ. ಬದಲಾಗಿ ಕನ್ನಡಕ್ಕೆ ಕಲಿಕಾ ಮಾಧ್ಯಮವಾಗುವ ಯೋಗ್ಯತೆಯಿಲ್ಲಾ ಎಂದೂ, ಕನ್ನಡಿಗರಿಗೆ ಆಂಗ್ಲ ಮಾಧ್ಯಮದಲ್ಲಿನ ಕಲಿಕೆಯೇ ಒಳಿತೆಂದೂ ತಿಳಿದಿರುವಂತಿದೆ.

No comments:

Post a Comment